ಕೋಮುಸಾಮರಸ್ಯಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ: ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಕೆ
ಮಂಗಳೂರು, ಜುಲೈ, 12: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮ ಹಾಗೂ ಕೋಮುಸಾಮರಸ್ಯಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದೆಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ.
21 ಪ್ರಕರಣ ದಾಖಲು
ಈ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರಕರಣಗಳನ್ನು 21 ದಾಖಲಿಸಲಾಗಿದೆ. ವಾಟ್ಸ್ಆ್ಯಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಟ್ವಿಟರ್ ಸೇರಿ ಇನ್ನಿತರ ಸಾಮಾಜಿಕ ಜಾಲತಾಣದಲ್ಲಿ ಧರ್ಮ ಹಾಗೂ ಕೋಮುಸಾಮರಸ್ಯಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಪೋಸ್ಟ್ ಹಾಕುವವರ ಮೇಲೆ ಪೊಲೀಸ್ ಇಲಾಖೆ ನಿಗಾ ಇಡುತ್ತದೆ. ಹಾಗೆಯೇ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶಗಳು ಹೆಚ್ಚಾಗಿ ಹರಿದಾಡುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈ ಬಗ್ಗೆ ಪೊಲೀಸರು ನಿಗಾವಹಿಸಿದ್ದಾರೆ. ಧರ್ಮದ ವಿಚಾರವಾಗಿ ಪರ- ವಿರೋಧ ಸಂದೇಶಗಳನ್ನು ಪೋಸ್ಟ್, ಶೇರ್ ಮತ್ತು ಕಮೆಂಟ್ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇಂತಹ ಅಪರಾಧಗಳನ್ನು ಪುನರಾವರ್ತಿಸಿದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.