December 23, 2024

ಶಾಲಾ ಶೌಚಾಲಯ ಸ್ವಚ್ಛತೆಗೆ ವಿದ್ಯಾರ್ಥಿಗಳ ಬಳಕೆ ಬೇಡ; ಸುತ್ತೋಲೆ ಆದೇಶ ಉಲ್ಲಂಘಿಸಿದರೆ FIR: ಇಲಾಖೆ ಎಚ್ಚರಿಕೆ

0
ಬೆಂಗಳೂರು, ಡಿಸೆಂಬರ್ 31; ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಕುರಿತು ಭಾರೀ ಚರ್ಚೆ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಛೇರಿ ಸುತ್ತೋಲೆಯೊಂದನ್ನು ಹೊರಡಿಸಿದೆ.
ಬಿ. ಬಿ. ಕಾವೇರಿ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸದಿರುವ ಕುರಿತು ಸೂಚನೆಗಳು ಎಂಬ ವಿಷಯವನ್ನು ಒಳಗೊಂಡಿದೆ.
ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಗಳ ಕರ್ತವ್ಯವಾಗಿರುತ್ತದೆ. ಆದರೆ ಅವರುಗಳು ಈ ಹೊಣೆಗಾರಿಕೆಯನ್ನು ಮರೆತು ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಆಕ್ಷೇಪಣೀಯ ಮತ್ತು ಖಂಡನೀಯ ಎಂದು ಸುತ್ತೋಲೆ ಹೇಳಿದೆ.
* ಶಾಲಾ ನಿರ್ವಹಣಾ ಅನುದಾನವನ್ನು ಆಯಾ ಸರ್ಕಾರಿ ಶಾಲೆಗಳಿಗೆ ಪ್ರಸ್ತುತ ಸಾಲಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಸದರಿ ಅನುದಾನವನ್ನು ಪ್ರಥಮ ಪ್ರಾಶಸ್ತ್ಯದಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಹಕಾರದೊಂದಿಗೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳತಕ್ಕದ್ದು. * ಒಂದು ವೇಳೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಸಿಬ್ಬಂದಿಗಳಾಗಲಿ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಗಾಗಿ ಬಳಸಿಕೊಂಡಲ್ಲಿ ಅಂತಹವರ ಮೇಲೆ ಇಲಾಖಾ ವತಿಯಿಂದ ನಿಯಮಾನುಸಾರ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಹಾಗೂ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ.
 * ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ವಿದ್ಯಾರ್ಥಿಗಳಿಗೆ ಈ ಕುರಿತು ಅರಿವು ಮೂಡಿಸತಕ್ಕದ್ದು ಹಾಗೂ ಯಾವುದೇ ವಿದ್ಯಾರ್ಥಿಗಳು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬಹುದಾಗಿರುತ್ತದೆ.
 * ಶಾಲೆಗಳಿಗೆ ಕಾಲ-ಕಾಲಕ್ಕೆ ಖುದ್ದು ಭೇಟಿ ನೀಡಿ ಶಾಲೆಗಳಲ್ಲಿ ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾದ ಬಳಕೆಗೆ ಯೋಗ್ಯವಾದ ಶೌಚಾಲಯಗಳು ಲಭ್ಯವಿರುವುದನ್ನು ಪರಿಶೀಲಿಸಿ ಮತ್ತು ಶಾಲಾ ಅವಧಿಯಲ್ಲಿ ಈ ಶೌಚಾಲಯಗಳಿಗೆ ಬೀಗ ಹಾಕದೇ ವಿದ್ಯಾರ್ಥಿಗಳ ಉಪಯೋಗಕ್ಕೆ ಅವಕಾಶ ಕಲ್ಪಿಸಿರುವುದನ್ನು ಹಾಗೂ ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವುದಿಲ್ಲ ಎಂಬ ಅಂಶಗಳನ್ನು ಖುದ್ದಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳುವಂತೆ ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು