ಖರ್ಗೆ ಕುರಿತು ಅವಹೇಳನಕಾರಿ ಹೇಳಿಕೆ: ಚಕ್ರವರ್ತಿ ಸೂಲಿಬೆಲೆಗೆ ರಿಲೀಫ್
ಬೆಂಗಳೂರು, ಜನವರಿ 31: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆಗೆ ರಿಲೀಫ್ ಸಿಕ್ಕಿದೆ.
ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಹಾಗಾಗಿ ಅವರು ಸದ್ಯ ಬಂಧನದ ಭೀತಿಯಿಂದ ಪಾರಾಗಿದ್ದಾರೆ. ನ್ಯಾಯಪೀಠ ಎಫ್ಐಆರ್‌ಗೆ ತಡೆ ನೀಡಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿತು.
ರಾಜಕೀಯ ಉದ್ದೇಶದಿಂದ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಚಕ್ರವರ್ತಿ ಸೂಲಿಬೆಲೆ ಅಲಿಯಾಸ್ ಮಿಥುನ್ ಚಕ್ರವರ್ತಿ ದೇವಿದಾಸ್ ಸೇಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ರಾಜೇಂದ್ರ ಬದಾಮಿಕರ್ ಅವರಿದ್ದ ಪೀಠ ವಿಚಾರಣೆ ನಡೆಸಿ, ತಡೆ ನೀಡಿ ಆದೇಶಿಸಿದೆ.