ಕುಮಾರಸ್ವಾಮಿಯ ವಿವಾದಾತ್ಮಕ ಹೇಳಿಕೆ: ರಾಜ್ಯ ಮಹಿಳಾ ಆಯೋಗದಿಂದ ನೋಟೀಸ್
ಬೆಂಗಳೂರು, ಏಪ್ರಿಲ್. 15: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ನಾಯಕರು, ಸಾಮಾಜಿಕ ಜಾಲತಾಣಗಳಲ್ಲೂ ಟೀಕೆ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ಮಹಿಳೆಯರ ಘನತೆಗೆ ಹಾಗೂ ಚಾರಿತ್ರಕ್ಕೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ನೋಟಿಸ್ ಜಾರಿ ಮಾಡಿ, ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಇದಲ್ಲದೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕುರಿತು ಅವಹನಕಾರಿ ಹೇಳಿಕೆ ನೀಡಿರುವ ಸಂಜಯ್ ಪಾಟೀಲ ವಿರುದ್ಧವೂ ಪ್ರಕರಣ ದಾಖಲಿಸಿದೆ.
“ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ ರಾಜಕೀಯ ನಾಯಕರುಗಳು ಮಹಿಳೆಯರ ಬಗ್ಗೆ ಹಾಗೂ ಅವರ ಘನತೆಯನ್ನು ಕುಂದಿಸುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದು ದುರದೃಷ್ಟಕರ. ಈ ವಿಚಾರವನ್ನು ಸಾಮಾಜಿಕ ದೃಷ್ಟಿಕೋನದಿಂದ ಗಂಭೀರವಾಗಿ ಪರಿಗಣಿಸಿ ಮಹಿಳಾ ಆಯೋಗ ನಿರ್ದಾಕ್ಷಿಣ್ಯ ಕ್ರಮವನ್ನು ಕೈಗೊಳ್ಳುತ್ತದೆ” ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.