ಜನತಾ ದರ್ಶನಕ್ಕೆ ಅವಕಾಶ ಕೊಡದ ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ
ಬೆಂಗಳೂರು : ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ನಡೆಸುವ ಜನತಾದರ್ಶನಕ್ಕೆ ಮಾತ್ರ ಅಧಿಕಾರಿಗಳು ಹೋಗಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿ ದ್ವೇಷದ ರಾಜಕಾರಣ ಪ್ರದರ್ಶಿಸುತ್ತಿದೆ ಎಂದು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಮಂಡ್ಯದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವರಾದ ನಂತರ ಮೊದಲ ಬಾರಿಗೆ ಶುಕ್ರವಾರ ಏರ್ಪಡಿಸಿದ್ದ ಜನತಾ ದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಜನತಾದರ್ಶನ ಮಾಡಬೇಕು ಎಂದು ತೀರ್ಮಾನಿಸಿ, ಈ ಸಂಬಂಧ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೆ. ಆದರೆ, ಗುರುವಾರ ಸರ್ಕಾರ ಕ್ಯಾಬಿನೆಟ್‌ನಲ್ಲಿ ಒಂದು ಸುತ್ತೋಲೆ ಹೊರಡಿಸಿ ಜನತಾದರ್ಶನ ಮಾಡಲು ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ಅವಕಾಶವಿದೆ. ಬೇರೆಯವರ ಜನತಾದರ್ಶನಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಆದೇಶ ಹೊರಡಿಸಿ, ಅಧಿಕಾರಿಗಳು ಇಲ್ಲಿಗೆ ಬರದಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.