ಸಂಸದ ಕೋಟಾಗೆ ರಿಲೀಪ್, ಶಾಸಕ ಪೂಂಜಗೆ ವಿಚಾರಣೆ ಎದುರಿಸಲು ಆದೇಶ. ಪ್ರಕರಣಗಳೇನು?
ಬೆಂಗಳೂರು, ಜುಲೈ 06: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕರ್ನಾಟಕ ಹೈಕೋರ್ಟ್ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸಪೂಜಾರಿಗೆ ರಿಲೀಫ್ ನೀಡಿದೆ. ಆದರೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ವಿಚಾರಣೆ ಎದುರಿಸುವಂತೆ ಆದೇಶ ನೀಡಲಾಗಿದೆ. ಹಾಗಾಗಿ ಸಂಸದರು ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಶಾಸಕರು ನ್ಯಾಯಾಲಯದ ಮುಂದೆ ತಮ್ಮ ಅಹವಾಲು ಮಂಡಿಸಿ ಪರಿಹಾರ ಕಂಡುಕೊಳ್ಳಬೇಕಿದೆ.
ಉಡುಪಿಯ ಜಿಲ್ಲೆಯ ಕಟಪಾಡಿಯ ಖಾಸಗಿ ಕಾಲೇಜೊಂದರ ಆವರಣದಲ್ಲಿ ರಾಜಕೀಯ ಭಾಷಣ ಮಾಡಿದ್ದ ಹಿನ್ನೆಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಮುಂದಿನ ಎಲ್ಲ ತನಿಖಾ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಮತ್ತಿತರರು ಸಲ್ಲಿಸಿದ್ದ ಅರ್ಜಿ ಸಂಬಂಧ ಚುನಾವಣಾ ಅಧಿಕಾರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಅಲ್ಲದೆ, ಪ್ರಕರಣ ಸಂಬಂಧ ಅಧೀನ ನ್ಯಾಯಾಲಯದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ.
ಪ್ರಕರಣ ಸಂಬಂಧ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಗುರುಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲರು ವಾದ ಮಂಡಿಸಿ, ಪ್ರಕರಣ ಸಂಬಂಧ ಚುನಾವಣಾ ಸಂಚಾರ ಅಧಿಕಾರಿ ಭಾರತ ದಂಡ ಸಂಹಿತೆಯ ಸೆಕ್ಷನ್ 188 ದೂರು ದಾಖಲಿಸಿದ್ದಾರೆ. ಈ ವಿಚಾರವಾಗಿ ಅವರು ದೂರು ದಾಖಲಿಸುವ ಅರ್ಹತೆ ಹೊಂದಿಲ್ಲ ಎಂದು ನ್ಯಾಯಪೀಠ ಮುಂದೆ ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ ಪ್ರಕರಣ ಸಂಬಂಧ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಚುನಾವಣಾ ಸಂಚಾರ ಅಧಿಕಾರಿಗೆ (ಸರ್ಕಾರಕ್ಕೆ) ನೋಟಿಸ್ ಜಾರಿಗೊಳಿಸಿದೆ. ಜತೆಗೆ ಪ್ರಕರಣ ಸಂಬಂಧ ಅಧೀನ ನ್ಯಾಯಾಲಯದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ನೀಡಿ, ವಿಚಾರಣೆಯನ್ನು ಮುಂದೂಡಿದೆ.
ಪ್ರಕರಣವೇನು?: ಮಾರ್ಚ್ 30ರಂದು ಉಡುಪಿಯ ಕಟಪಾಡಿಯ ಖಾಸಗಿ ಕಾಲೇಜು ಆವರಣದಲ್ಲಿ ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ರಾಜಕೀಯ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ, ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಕಾಪು ಪೊಲೀಸ್ ಠಾಣೆಯಲ್ಲಿ ಚುನಾವಣಾ ಸಂಚಾರ ಅಧಿಕಾರಿಗಳು ದೂರು ದಾಖಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿದಾರರ ಪರ ಹಿರಿಯ ವಕೀಲರು ವಾದ ಮಂಡಿಸಿ, ಪ್ರಕರಣ ಸಂಬಂಧ ಚುನಾವಣಾ ಸಂಚಾರ ಅಧಿಕಾರಿ ಭಾರತ ದಂಡ ಸಂಹಿತೆಯ ಸೆಕ್ಷನ್ 188 ದೂರು ದಾಖಲಿಸಿದ್ದಾರೆ. ಈ ವಿಚಾರವಾಗಿ ಅವರು ದೂರು ದಾಖಲಿಸುವ ಅರ್ಹತೆ ಹೊಂದಿಲ್ಲ ಎಂದು ನ್ಯಾಯಪೀಠ ಮುಂದೆ ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ ಪ್ರಕರಣ ಸಂಬಂಧ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಚುನಾವಣಾ ಸಂಚಾರ ಅಧಿಕಾರಿಗೆ (ಸರ್ಕಾರಕ್ಕೆ) ನೋಟಿಸ್ ಜಾರಿಗೊಳಿಸಿದೆ. ಜತೆಗೆ ಪ್ರಕರಣ ಸಂಬಂಧ ಅಧೀನ ನ್ಯಾಯಾಲಯದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ನೀಡಿ, ವಿಚಾರಣೆಯನ್ನು ಮುಂದೂಡಿದೆ.
ಶಾಸಕ ಹರೀಶ್ ಪೂಂಜಾ ಪ್ರಕರಣ:
ಪರವಾನಿಗೆ ಪಡೆಯದೆ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಹಾಗೂ ಸ್ಪೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪಗಳನ್ನು ಕೈ ಬಿಡಲು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಸೂಚಿಸಿದೆ.
ಬೆಳ್ತಂಗಡಿ ಠಾಣಾ ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠವು ಈ ಸೂಚನೆ ನೀಡಿ ಅರ್ಜಿಗಳನ್ನು ಇತ್ಯರ್ಥಪಡಿಸಿದೆ.
ಪ್ರಕರಣ ಸಂಬಂಧ ಶಾಸಕ ಪೂಂಜಾ ವಿರುದ್ಧ ಈಗಾಗಲೇ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ಕೋರ್ಟ್) ದೋಷಾರೋಪ ಪಟ್ಟಿ ಸಲ್ಲಿಸಿರುವ ಅಂಶವನ್ನು ಪರಿಗಣಿಸಿದ ನ್ಯಾಯಪೀಠ ಈ ಆದೇಶ ಮಾಡಿದೆ.
ದೋಷಾರೋಪ ಪಟ್ಟಿ ಸಲ್ಲಿಸಿರುವುದರಿಂದ ಆರೋಪಗಳನ್ನು ಕೈ ಬಿಡಲು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿದಾರರು ಅರ್ಜಿ ಸಲ್ಲಿಸಲಿ. ನ್ಯಾಯಾಲಯವು 8 ವಾರಗಳಲ್ಲಿ ಆ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಬಾರದು ಎಂದು ಸೂಚಿಸಿದ ನ್ಯಾಯಪೀಠ ಅರ್ಜಿಗಳನ್ನು ಇತ್ಯರ್ಥಪಡಿಸಿತು.
ಪ್ರಕರಣದ ಹಿನ್ನೆಲೆ: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಶಶಿರಾಜ್ ಶೆಟ್ಟಿ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಇದರಿಂದ ಸಿಟ್ಟಾಗಿದ್ದ ಅರ್ಜಿದಾರರು ಠಾಣೆಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಾಚ್ಯವಾಗಿ ಬೈದು ಬೆದರಿಕೆ ಒಡ್ಡಿದ್ದರು. ಜೊತೆಗೆ, ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ಸಹ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಅಧೀನ ನ್ಯಾಯಾಲಯಕ್ಕೆ ಪೊಲೀಸರು ಹರೀಶ್ ಪೂಂಜಾ ಹಾಗೂ ಇತರೆ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.