December 24, 2024

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ : ಮುನ್ನೆಚ್ಚರಿಕೆ ಕ್ರಮಕ್ಕೆ ಗ್ರಾಮ ಪಂಚಾಯತಿಗಳಿಗೆ ಖಡಕ್ ಸೂಚನೆ‌ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

0

 

ಬೆಂಗಳೂರು, ಜುಲೈ 08: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕುಡಿಯುವ ನೀರಿನ ಸರಬರಾಜು ಟ್ಯಾಂಕ್ ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಸಚಿವರು ಹೇಳಿದ್ದಾರೆ.

ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್ ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು; ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು.

ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು; ಸಾರ್ವಜನಿಕ ಸ್ಥಳಗಳು, ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು; ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ಹೆಚ್ಚುವರಿ ನೀರು ಸರಾಗವಾಗಿ ಹರಿಯುವಂತೆ ಸೂಕ್ತವಾದ ಚರಂಡಿ ವ್ಯವಸ್ಥೆ ಮಾಡುವುದರ ಜೊತೆಗೆ ಈಗಾಗಲೇ ಇರುವ ಚರಂಡಿಗಳಲ್ಲಿ ಶೇಖರಣೆಗೊಂಡಿರುವ ಹೂಳನ್ನು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮತ್ತು ಚರಂಡಿಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.

 

ಕುಡಿಯುವ ನೀರಿನ ಪೂರೈಕೆ ನಳ್ಳಿಗಳಿಗೆ ಕಂಟ್ರೋಲ್ ವಾಲ್ಸ್ ಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಬೇಕು, ಇದರಿಂದ ನಳ್ಳಿಗಳ ಸುತ್ತಲಿನ ಗುಂಡಿಗಳಲ್ಲಿ ನೀರು ಶೇಖರಣೆಯಾಗುವುದನ್ನು ಹಾಗೂ ಈಡಿಸ್ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬಹುದು ಎಂದು ಗ್ರಾಮೀಣಾಭಿವೃದ್ಧಿ ಸಚಿವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು