ದ್ವೇಷ ಭಾಷಣದ ಆರೋಪ: ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು, ಜುಲೈ 10: ದ್ವೇಷ ಭಾಷಣದ ಆರೋಪದ ಮೇಲೆ ಬಿಜೆಪಿ ನಾಯಕರಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮತ್ತಿತರರ ವಿರುದ್ಧ ಕ್ರಮ ಕೈಗೊಂಡು, ಅಂತಹ ಭಾಷಣಗಳು ಮರುಕಳಿಸದಂತೆ ಮಾಡುವಲ್ಲಿ ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಹಾಗಾಗಿ ಬಿಜೆಪಿ ನಾಯಕರು ನಿರಾಳರಾಗಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮೊಹಮ್ಮದ್ ಖಲೀಮುಲ್ಲಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ. ಅರವಿಂದ್ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿದೆ
ಅರ್ಜಿಯಲ್ಲಿ ಕೇಂದ್ರದ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪರಿಷತ್ ಸದಸ್ಯ ಸಿ. ಟಿ. ರವಿ, ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ, ಮಾಜಿ ಸಂಸದ ಪ್ರತಾಪ್ ಸಿಂಹ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ, ಬಿಜೆಪಿಯ ಉಚ್ಚಾಟಿತ ನಾಯಕ ಕೆ. ಎಸ್. ಈಶ್ವರಪ್ಪ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಕೋರಿದ್ದರು.