ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು
ಹುಬ್ಬಳ್ಳಿಯ ಅಚ್ಚವ್ವ ಕಾಲೋನಿಯಲ್ಲಿ ನಡೆದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇನ್ನೋರ್ವ ಅಯ್ಯಪ್ಪ ಮಾಲಾಧಾರಿ ತೇಜಸ್ ಸತಾರೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರಿಂದ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ತೇಜಸ್ ಏಕೈಕ ಮಗನಾಗಿದ್ದು ಹೋಟೆಲ್ ವ್ಯವಹಾರ ನಡೆಸುವ ಕನಸು ಕಂಡಿದ್ದರು. ಮಗನನ್ನು ಕಳೆದುಕೊಂಡ ತಂದೆ ತಾಯಿ ಕಣ್ಣೀರು ಹಾಕಿದ್ದಾರೆ.
ಹುಬ್ಬಳ್ಳಿ, ಡಿಸೆಂಬರ್ 30: ಡಿ.22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದಿದ್ದ ಸಿಲಿಂಡರ್ ಸ್ಫೋಟಗೊಂಡು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ (death). ಆ ಮೂಲಕ ಮೃತಪಟ್ಟವರ ಸಂಖ್ಯೆ 7ಕ್ಕೇರಿಕೆ ಆಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತೇಜಸ್ ಸತಾರೆ(26) ಕೊನೆಯುಸಿರೆಳೆದಿದ್ದಾರೆ. ಒಬ್ಬನೇ ಮಗನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಕನಸು ನನಸಾಗಿಯೇ ಉಳಿಯಿತು: ತಂದೆ ಕಣ್ಣೀರು
ಒಬ್ಬನೇ ಮಗನಾಗಿದ್ದ ತೇಜಸ್ನನ್ನು ಕಳೆದುಕೊಂಡು ತಂದೆ-ತಾಯಿ ಕಣ್ಣೀರು ಹಾಕಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಎಕ್ಸ್ ರೇ ಟೆಕ್ನಿಶಿಯನ್ ಆಗಿ ತೇಜಸ್ ತಂದೆ ಮುರಳಿಯವರು ಕೆಲಸ ಮಾಡುತ್ತಿದ್ದರು. ಕಳೆದ ಮೂರು ವರ್ಷಗಳಿಂದ ತೇಜಸ್ ಮಾಲೆ ಧರಿಸುತ್ತಿದ್ದರು. ಪುಣೆಯಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿ ಬಂದಿದ್ದರು. ತೇಜಸ್ ಹೋಟೆಲ್ ಮಾಡುವ ಕನಸು ಕಂಡಿದ್ದ. ಆ ಕನಸು ನನಸಾಗಿಯೇ ಉಳಿಯಿತು ಎಂದು ತಂದೆ ಖಾಸಗಿ ವಾಹಿನಿ ಮುಂದೆ ನೋವು ತೋಡಿಕೊಂಡಿದ್ದಾರೆ.